ವಿಜಯ ಸಿಂಧೂರ, ತಾಳಿಕೋಟೆ
ಅಥಣಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮುಂಬರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡುವಂತೆ ಗಾಣಿಗ ಸಮಾಜದ ಅಧ್ಯಕ್ಷ ಪ್ರಕಾಶ್ ಸಜ್ಜನ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲಕ್ಷ್ಮಣ ಸವದಿ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಧೀಮಂತ ನಾಯಕರು. ಅವರು ಈ ಹಿಂದೆ ಸಚಿವರಾಗಿ ಹಾಗೂ ಉಪಮುಖ್ಯಮಂತ್ರಿಗಳಾಗಿ ನೀಡಿದ ಆಡಳಿತಾತ್ಮಕ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದ್ದಾರೆ.
ಸವದಿ ಅವರು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೆ, ಇಡೀ ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಸದಾ ಧ್ವನಿಯಾಗಿದ್ದಾರೆ. ಗಾಣಿಗ ಸಮಾಜ ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ, ಜೊತೆಗೆ ಉತ್ತರ ಕರ್ನಾಟಕದ ನೀರಾವರಿ ಮತ್ತು ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡಲು ಅವರಂತಹ ಅನುಭವಿ ನಾಯಕರ ಅಗತ್ಯ ಸರ್ಕಾರಕ್ಕೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಸಾಮರ್ಥ್ಯ ಹೊಂದಿರುವ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಮತ್ತು ಪ್ರಮುಖ ಖಾತೆ ನೀಡಬೇಕು. ಯಾವುದೇ ವಿಳಂಬವಿಲ್ಲದೆ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರು ಈ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಪ್ರಕಾಶ್ ಸಜ್ಜನ ಅವರು ಒತ್ತಾಯಿಸಿದ್ದಾರೆ.
