ವಿಜಯ ಸಿಂಧೂರ ಸುದ್ದಿ
ಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸ್ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಸಂಜೆ ನಡೆದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡು ಚಿಕಿತ್ಸೆಗೆ ದಾಖಲಾದ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ತಾಲೂಕಿನ ಶಿಗ್ಲಿ-ದೊಡ್ಡರ ಮಧ್ಯೆ ನಡೆದಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಲಕ್ಷ್ಮೇಶ್ವರ ಘಟಕಕ್ಕೆ ಸೇರಿದ ಬಸ್ ಶಿಗ್ಲಿ ಮಾರ್ಗವಾಗಿ ದೊಡ್ಡೂರ ಮೂಲಕ ಗುತ್ತಲ ಕಡೆಗೆ ತೆರಳುತ್ತಿತ್ತು. ದೊಡ್ಡೂರ ಗ್ರಾಮದ ಅಣತಿ ದೂರದಲ್ಲಿರುವ ಕಿರು ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ವಾಹನ ಸಂಚಾರಕ್ಕಾಗಿ ನಿರ್ಮಿಸಿದ್ದ ತಾತ್ಕಾಲಿಕ ಕಚ್ಚಾ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಬಸ್‌ನ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 105 ಮಂದಿಯಲ್ಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರಕ್ಕೆ ಡಿಕ್ಕಿಯಾಗಿದ್ದರಿಂದ ಮತ್ತಷ್ಟು ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಗಾಯಾಳುಗಳಿಗೆ ಲಕ್ಷ್ಮೀಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಗಂಭೀರವಾಗಿ ಗಾಯಗೊಂಡವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ವಿದ್ಯಾರ್ಥಿಗಳ ಕೈ, ಕಾಲು, ಬೆನ್ನು ಹಾಗೂ ಕುತ್ತಿಗೆ ಭಾಗಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ನೋವಿನಿಂದ ನರಳುತ್ತಿರುವ ದೃಶ್ಯ ಮನಕಲಕುವಂತಿತ್ತು. ಕರ್ತವ್ಯ ಅವಧಿ ಮುಗಿದಿದ್ದರೂ ಆಸ್ಪತ್ರೆ ಸಿಬ್ಬಂದಿ, ವೈದ್ಯರು, ಪೊಲೀಸರು ಹಾಗೂ ಸಾರ್ವಜನಿಕರು ತುರ್ತು ಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದರು.
ಈ ಭಾಗದಲ್ಲಿ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಅಪಘಾತಗಳು ಮರುಕಳಿಸುತ್ತಿವೆ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಗ್ರಾಮೀಣ ಭಾಗಗಳಿಗೆ ಪ್ರಯಾಣಕ್ಕೆ ಯೋಗ್ಯವಲ್ಲದ ಗುಜರಿ ಸೇರುವ ಬಸ್‌ಗಳನ್ನು ಓಡಿಸಲಾಗುತ್ತಿದ್ದು, ಶಾಲಾ ಅವಧಿಯಲ್ಲಿ ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು ಕಿಕ್ಕಿರಿದು ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ರಸ್ತೆ ದುರಸ್ತಿ ಹಾಗೂ ಹೆಚ್ಚುವರಿ ಬಸ್ ಸೇವೆ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
