ವಿಜಯ ಸಿಂಧೂರ ನರೇಗಲ್ಲ,
ಕರ್ನಾಟಕ ಏಕೀಕರಣ ಚಳವಳಿಯ ಪ್ರಮುಖ ಹೋರಾಟಗಾರ ಹಾಗೂ ಕನ್ನಡ ನಾಡು-ನುಡಿಯ ಅಭಿಮಾನಿಯಾಗಿದ್ದ ದಿವಂಗತ ಅಂದಾನಪ್ಪ ದೊಡ್ಡಮೇಟಿಯವರ ಸ್ಮಾರಕ ಭವನ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಜು. 5ರಂದು ಜಕ್ಕಲಿ ಗ್ರಾಮದಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಸುಮಾರು 300 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸ್ಮಾರಕ ಭವನ ನಿರ್ಮಾಣದ ಮೂಲಕ ಅಂದಾನಪ್ಪ ದೊಡ್ಡಮೇಟಿಯವರ ಕನ್ನಡಪರ ಹೋರಾಟ, ಸಾಮಾಜಿಕ ಸೇವೆ ಹಾಗೂ ನಾಡು-ನುಡಿಯ ಮೇಲಿನ ಅಭಿಮಾನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶ ಹೊಂದಲಾಗಿದೆ.
ಜು. 5ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಭೂಮಿ ಪೂಜಾ ಸಮಾರಂಭದಲ್ಲಿ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಕನ್ನಡಾಭಿಮಾನಿಗಳು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಂದಾನಪ್ಪ ದೊಡ್ಡಮೇಟಿಯವರು ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕನ್ನಡ ನಾಡಿನ ಹಿತಾಸಕ್ತಿಗಾಗಿ ಹೋರಾಟ ನಡೆಸಿದ ಪ್ರಮುಖ ನಾಯಕರಾಗಿದ್ದರು. ಅವರ ಸ್ಮರಣಾರ್ಥ ನಿರ್ಮಾಣಗೊಳ್ಳಲಿರುವ ಈ ಭವನವು ಮುಂದಿನ ದಿನಗಳಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ, ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವಾಗಿ ರೂಪುಗೊಳ್ಳುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
