ವಿಜಯ ಸಿಂಧೂರ ಗದಗ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ, ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಕೆ ಸುರಕೋಡ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮಾ.5 ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ
.

ಗದಗನ ವಿಶ್ವೇಶ್ವರ ನಗರದಲ್ಲಿರುವ ಅಧಿಕಾರಿ ನಿವಾಸ ಸೇರಿದಂತೆ, ಧಾರವಾಡ, ರೋಣ ತಾಲೂಕಿನ ಕೌಜಗೇರಿ ಸೇರಿ ಒಟ್ಟು ಆರು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್‌ಪಿ ಎಸ್.ಟಿ ಸಿದ್ಧಲಿಂಗಪ್ಪ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಶಿರಹಟ್ಟಿಯಲ್ಲಿ ಬಿಸಿಎಂ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂ.ಕೆ. ಸುರಕೋಡ ವಿರುದ್ಧ, ಸೇವಾ ಅವಧಿಯಲ್ಲಿ ಅಕ್ರಮವಾಗಿ ಅಪಾರ ಆಸ್ತಿ ಗಳಿಸಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆ, ಈ ದಾಳಿ ನಡೆದಿದೆ ಎನ್ನಲಾಗಿದೆ.

ಗದಗ ಲೋಕಾಯುಕ್ತ ಡಿವೈಎಸ್‌ಪಿ ವಿಜಯ ಬಿರಾದಾರ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಮನೆಗಳು, ಕಚೇರಿಗಳು ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳು, ಬ್ಯಾಂಕ್ ಪಾಸ್‌ಬುಕ್‌ಗಳು, ಭೂ ದಾಖಲೆಗಳು ಮತ್ತು ಇತರೆ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಮೂಲತಃ ರೋಣ ತಾಲೂಕ ಕೌಜಗೇರಿ ಗ್ರಾಮದವರಾದ ಸುರಕೋಡ, ಶಿರಹಟ್ಟಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದ್ದು, ತನಿಖೆ ಪರಿಶೀಲನೆ ಪೂರ್ಣಗೊಂಡ ಬಳಿಕ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ
