ವಿಜಯ ಸಿಂಧೂರ, ತಾಳಿಕೋಟೆ

ತಾಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿಗೆ ಒಳಪಡುವ ಪಡೇಕನೂರ ಗ್ರಾಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಬುಧವಾರ ಭೇಟಿ ನೀಡಿ ಗ್ರಾಮದಲ್ಲಿನ ವಿವಿಧ ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಗ್ರಾಮದೊಳಗೆ ಬಾಕಿ ಉಳಿದಿರುವ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಪಡೇಕನೂರ ಗ್ರಾಮದಿಂದ ಕೊಣ್ಣೂರ ಗ್ರಾಮದವರೆಗೆ ಸಿಸಿ ರಸ್ತೆ ನಿರ್ಮಾಣದ ಅಗತ್ಯತೆ ಕುರಿತು ಪರಿಶೀಲನೆ ನಡೆಸಿದರು.
ಇದೇ ವೇಳೆ ಪಡೇಕನೂರ ಗ್ರಾಮದಿಂದ ಹಳ್ಳೂರ ಗ್ರಾಮದವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸ್ಥಳದಲ್ಲೇ ಪರಿಶೀಲಿಸಿದ ಸಿಇಒ ಅವರು, ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಜೊತೆಗೆ ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಬೇಕು ಎಂದು ಪಿ.ಆರ್.ಇ.ಡಿ ಇಲಾಖೆಯ ಡಬ್ಲ್ಯೂಇ ವಿದ್ಯಾಧರ ನ್ಯಾಮನಗೌಡ ಅವರಿಗೆ ನಿರ್ದೇಶನ ನೀಡಿದರು.
ನಂತರ ಪಡೇಕನೂರ ಗ್ರಾಮದ ಅಂಗನವಾಡಿ ಕೇಂದ್ರ–3ಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ ಹಾಗೂ ಅವರಿಗೆ ನೀಡಲಾಗುತ್ತಿರುವ ಪೌಷ್ಟಿಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು. ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಪೌಷ್ಟಿಕ ಆಹಾರವನ್ನು ತಯಾರಿಸಿ ನೀಡಬೇಕು. ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಮಕ್ಕಳನ್ನು ಸಾಧ್ಯವಾದಷ್ಟು ನೆರಳಿನ ಪ್ರದೇಶದಲ್ಲಿ ನೋಡಿಕೊಳ್ಳಬೇಕು ಎಂದು ಅಂಗನವಾಡಿ ಕಾರ್ಯಕರ್ತೆಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪಿ.ಆರ್.ಇ.ಡಿ ಡಬ್ಲ್ಯೂಇ ವಿದ್ಯಾಧರ ನ್ಯಾಮನಗೌಡ, ಎ.ಡಬ್ಲ್ಯೂ ಶಿವರಾಜ ನಾಯಕ, ಅಭಿಯಂತರ ಸಂತೋಷ ಲಮಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
