ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

ವಿಜಯ ಸಿಂಧೂರ ಚಿತ್ರದುರ್ಗ

ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.


ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಘಟನೆ

ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಇದೇ ವೇಳೆ ಕಾರಿನಲ್ಲಿ ಇದ್ದ ಪಿಎಸ್‌ಐ ಈಶ್ವರ್ ಹಾಗೂ ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್ ಮಹಾಂತೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಐಮಂಗಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *