ವಿಜಯಪುರ: ‘ಪಂಚರಾಜ್ಯ ಚುನಾವಣೆ ನಂತರ ರಾಜ್ಯಸಚಿವ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ’ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
‘ಸಚಿವ ಸಂಪುಟ ವಿಸ್ತರಣೆ ವೇಳೆ ಶೇ 50 ರಷ್ಟು ಈಗಿರುವ ಸಚಿವರನ್ನು ಕೈಬಿಟ್ಟು, ಅವರಿಗೆ ಪಕ್ಷ ಸಂಘಟನೆ ಜವಾಬ್ದಾರಿ ವಹಿಸಲು ಹಾಗೂ ಶೇ 50ರಷ್ಟು ಹೊಸಬರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದ್ದು, ಹೈಕಮಾಂಡ್ ಕೂಡ ಈ ಬಗ್ಗೆ ಒಲವು ವ್ಯಕ್ತಪಡಿಸಿದೆ’ ಎಂದು ನಗರದಲ್ಲಿ ಭಾನುವಾರ ಪತ್ರಕರ್ತರಿಗೆ ತಿಳಿಸಿದರು.’ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಈ ವಿಷಯದಲ್ಲಿ ನಾವ್ಯಾರೂ ಮಾತನಾಡದಂತೆ ಹೈಕಮಾಂಡ್ ಲಕ್ಷ್ಮಣ ರೇಖೆ ಹಾಕಲಾಗಿದೆ’ ಎಂದು ಹೇಳಿದರು.

*2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಕಾರ್ಯಾಧ್ಯಕ್ಷನಾಗಿ ನನ್ನ ಪಾಲು ಇದೆ. ಅಂದು ನನ್ನ ಜೊತೆ ಕಾರ್ಯಾಧ್ಯಕ್ಷರಾಗಿದ್ದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಅವರಿಗೆ ಈಗಾಗಲೇ ಸಚಿವರಾಗುವ ಅವಕಾಶ ಸಿಕ್ಕಿದೆ.ಹೀಗಾಗಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೂ ಅವಕಾಶ ಲಭಿಸುವ ವಿಶ್ವಾಸ ಇದೆ’ ಎಂದು ಆಶಯ ವ್ಯಕ್ತಪಡಿಸಿದರು.
